ಮಾರ್ಕ 11

1ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿನ ಸಮೀಪಕ್ಕೆ ಬಂದಿದ್ದರು. ಅವರು ಆಲಿವ್ ಗುಡ್ಡದ ಬಳಿಯಿರುವ ಬೆತ್ಛಗೆ ಹಾಗೂ ಬೆಥಾನಿ ಎಂಬ ಊರುಗಳಿಗೆ ಬಂದಾಗ ಅಲ್ಲಿ ಯೇಸು ತನ್ನ ಇಬ್ಬರು ಶಿಷ್ಯರನ್ನು ಕರೆದು, 2“ಅಲ್ಲಿ ಕಾಣುತ್ತಿರುವ ಊರಿಗೆ ಹೋಗಿರಿ. ನೀವು ಅದನ್ನು ಪ್ರವೇಶಿಸಿದಾಗ, ಯಾರೂ ಸವಾರಿ ಮಾಡಿಲ್ಲದ ಒಂದು ಕತ್ತೆ ಮರಿಯನ್ನು ಅಲ್ಲಿ ಕಟ್ಟಿರುವುದನ್ನು ಕಾಣುವಿರಿ. ಆ ಕತ್ತೆಯನ್ನು ಬಿಚ್ಚಿಕೊಂಡು, ನನ್ನ ಬಳಿಗೆ ತನ್ನಿರಿ. 3ಯಾವನಾದರೂ ‘ಆ ಕತ್ತೆಯನ್ನು ಏಕೆ ತೆಗೆದುಕೊಂಡು ಹೋಗುತ್ತಿದ್ದೀರಿ’ ಎಂದು ನಿಮ್ಮನ್ನು ಕೇಳಿದರೆ, ‘ಒಡೆಯನಿಗೆ ಈ ಕತ್ತೆ ಬೇಕಾಗಿದೆ. ಆತನು ಇದನ್ನು ಬೇಗನೆ ಕಳುಹಿಸಿಕೊಡುವನು’ ಎಂದು ಅವನಿಗೆ ಹೇಳಿರಿ” ಎಂದನು. 4ಶಿಷ್ಯರು ಊರಿನೊಳಗೆ ಹೋದಾಗ ರಸ್ತೆಯಲ್ಲಿನ ಒಂದು ಮನೆಯ ಬಾಗಿಲಿನ ಪಕ್ಕದಲ್ಲಿ ಕಟ್ಟಿಹಾಕಿದ್ದ ಕತ್ತೆಮರಿಯೊಂದನ್ನು ಕಂಡರು. ಶಿಷ್ಯರು ಹೋಗಿ ಆ ಕತ್ತೆಯನ್ನು ಬಿಚ್ಚಿದಾಗ, 5ಅಲ್ಲಿ ನಿಂತಿದ್ದ ಕೆಲವು ಜನರು, “ನೀವು ಮಾಡುತ್ತಿರುವುದೇನು? ಆ ಕತ್ತೆಯನ್ನು ಏಕೆ ಬಿಚ್ಚುತ್ತಿದ್ದೀರಿ?” ಎಂದು ಕೇಳಿದರು. 6ಯೇಸು ತಮಗೆ ಹೇಳಿದ ರೀತಿಯಲ್ಲಿಯೇ ಶಿಷ್ಯರು ಉತ್ತರಿಸಿದರು. ಆಗ ಜನರು ಆ ಕತ್ತೆಯನ್ನು ಶಿಷ್ಯರಿಗೆ ಬಿಟ್ಟುಕೊಟ್ಟರು. 7ಶಿಷ್ಯರು ಕತ್ತೆಯನ್ನು ಯೇಸುವಿನ ಬಳಿಗೆ ತಂದು ತಮ್ಮ ಹೊದಿಕೆಗಳನ್ನು ಅದರ ಮೇಲೆ ಹಾಸಿದರು. ಆಗ ಯೇಸು ಅದರ ಮೇಲೆ ಕುಳಿತನು. 8ಅನೇಕ ಜನರು ಯೇಸುವಿಗಾಗಿ ರಸ್ತೆಯ ಮೇಲೆ ತಮ್ಮ ಹೊದಿಕೆಗಳನ್ನು ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಲೆಗಳನ್ನು ಕೊಯ್ದುತಂದು ರಸ್ತೆಯ ಮೇಲೆ ಹರಡಿದರು. 9ಕೆಲವು ಜನರು ಯೇಸುವಿನ ಮುಂದೆ ಹೋಗುತ್ತಿದ್ದರು. ಇತರ ಜನರು ಆತನ ಹಿಂದೆ ಹೋಗುತ್ತಿದ್ದರು. ಜನರೆಲ್ಲರೂ, “‘ಆತನನ್ನು ಕೊಂಡಾಡಿರಿ! ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ಆಶೀರ್ವಾದವಾಗಲಿ.’ 10“ನಮ್ಮ ಪಿತೃವಾದ ದಾವೀದನ ರಾಜ್ಯವು ಬರಲಿ! ಮೇಲೋಕಗಳಲ್ಲಿ ದೇವರಿಗೆ ಜಯವಾಗಲಿ” ಎಂದು ಕೂಗಿದರು. 11ಯೇಸು ಜೆರುಸಲೇಮನ್ನು ತಲುಪಿದಾಗ, ದೇವಾಲಯಕ್ಕೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನೂ ನೋಡಿದನು. ಆದರೆ ಆಗಲೇ ತಡವಾಗಿತ್ತು. ಆದ್ದರಿಂದ ಯೇಸು ಹನ್ನೆರಡು ಜನ ಅಪೊಸ್ತಲರೊಂದಿಗೆ ಬೆಥಾನಿಯಕ್ಕೆ ಹೋದನು. 12ಮರುದಿನ, ಯೇಸು ಬೆಥಾನಿಯದಿಂದ ಹೋಗುತ್ತಿರಲು ಆತನಿಗೆ ಹಸಿವಾಗಿತ್ತು. 13ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ನೋಡಿದನು. ಆದ್ದರಿಂದ ಆ ಮರದಲ್ಲಿ ಅಂಜೂರದ ಹಣ್ಣೇನಾದರೂ ಸಿಕ್ಕಬಹುದೆಂದು ಅದರ ಬಳಿಗೆ ಹೋದನು. ಆದರೆ ಆತನು ಆ ಮರದಲ್ಲಿ ಅಂಜೂರದ ಹಣ್ಣುಗಳನ್ನು ಕಾಣಲಿಲ್ಲ. ಅಲ್ಲಿ ಎಲೆಗಳು ಮಾತ್ರ ಇದ್ದವು. ಏಕೆಂದರೆ ಅದು ಅಂಜೂರ ಹಣ್ಣಿನ ಕಾಲವಾಗಿರಲಿಲ್ಲ. 14ಆದ್ದರಿಂದ ಯೇಸು ಆ ಮರಕ್ಕೆ, “ಇನ್ನು ಮೇಲೆ ನಿನ್ನ ಹಣ್ಣನ್ನು ಯಾರೂ ತಿನ್ನದಂತಾಗಲಿ” ಎಂದನು. ಯೇಸುವಿನ ಶಿಷ್ಯರಿಗೂ ಈ ಮಾತು ಕೇಳಿಸಿತು. 15ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮನ್ನು ಪ್ರವೇಶಿಸಿದರು. ಅವರು ದೇವಾಲಯದೊಳಗೆ ಬಂದಾಗ ಅಲ್ಲಿ ವಸ್ತುಗಳನ್ನು ಮಾರುತ್ತಿದ್ದ ಮತ್ತು ಕೊಳ್ಳುತ್ತಿದ್ದ ಜನರನ್ನು ಆತನು ಅಲ್ಲಿಂದ ಹೊರಡಿಸತೊಡಗಿದನು; ಹಣ ವಿನಿಮಯಮಾಡಿಕೊಳ್ಳುತ್ತಿದ್ದ ವ್ಯಾಪಾರಿಗಳ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು. 16ಹೊರೆಹೊತ್ತುಕೊಂಡು ದೇವಾಲಯದ ಮೂಲಕ ಹಾದುಹೋಗುತ್ತಿದ್ದವರನ್ನು ಆತನು ತಡೆದನು. 17ನಂತರ ಯೇಸು ಜನರಿಗೆ ಉಪದೇಶಿಸಿ, “‘ನನ್ನ ಆಲಯವು ಎಲ್ಲಾ ಜನರಿಗೂ ಪ್ರಾರ್ಥನೆಯ ಆಲಯವೆನಿಸಿಕೊಳ್ಳುವುದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರು ಅಡಗಿಕೊಳ್ಳುವ ಸ್ಥಳವನ್ನಾಗಿ ಮಾಡಿದ್ದೀರಿ’” ಎಂದು ಹೇಳಿದನು. 18ಮಹಾಯಾಜಕರು ಹಾಗೂ ಧರ್ಮೋಪದೇಶಕರು ಈ ಸಂಗತಿಗಳನ್ನು ಕೇಳಿ ಯೇಸುವನ್ನು ಕೊಲ್ಲಿಸಲು ತಕ್ಕ ಮಾರ್ಗವನ್ನು ಕಂಡುಹಿಡಿಯಲು ಪ್ರಯತ್ನಿಸತೊಡಗಿದರು. ಜನರೆಲ್ಲರೂ ಯೇಸುವಿನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಯೇಸುವಿಗೆ ಭಯಪಟ್ಟರು. 19ಆ ರಾತ್ರಿ ಯೇಸು ಮತ್ತು ಆತನ ಶಿಷ್ಯರು ಪಟ್ಟಣವನ್ನು ಬಿಟ್ಟುಹೋದರು. 20ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರೊಂದಿಗೆ ಹೋಗುತ್ತಿದ್ದನು. ಹಿಂದಿನ ದಿನ ಯೇಸು ಶಪಿಸಿದ ಅಂಜೂರದ ಮರವನ್ನು ಶಿಷ್ಯರು ನೋಡಿದರು. ಅಂಜೂರದ ಮರವು ಬೇರುಸಹಿತ ಒಣಗಿಹೋಗಿತ್ತು. 21ಪೇತ್ರನು ಆ ಮರವನ್ನು ಜ್ಞಾಪಿಸಿಕೊಂಡು, ಯೇಸುವಿಗೆ, “ಗುರುವೇ, ನೋಡು! ನಿನ್ನೆ ನೀನು ಶಪಿಸಿದ ಅಂಜೂರದ ಮರ ಒಣಗಿಹೋಗಿದೆ!” ಎಂದನು. 22ಯೇಸು, “ದೇವರಲ್ಲಿ ನಂಬಿಕೆ ಇಡಿರಿ. 23ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದೊಳಗೆ ಬೀಳು’ ಎಂದು ಹೇಳಿ, ಸಂಶಯವನ್ನೇಪಡದೆ, ನೀವು ಹೇಳಿದ್ದು ಖಂಡಿತವಾಗಿ ನೆರವೇರುತ್ತದೆ ಎಂದು ನಂಬಿದರೆ, ದೇವರು ಅದನ್ನು ನಿಮಗಾಗಿ ಮಾಡುತ್ತಾನೆ. 24ಆದ್ದರಿಂದ ನೀವು ಪ್ರಾರ್ಥನೆಯಲ್ಲಿ ಬೇಡಿಕೊಂಡು, ಅದನ್ನೆಲ್ಲಾ ಹೊಂದಿಕೊಂಡಾಯಿತೆಂದು ನಂಬಿದರೆ, ಅದೆಲ್ಲಾ ನಿಮ್ಮದಾಗುತ್ತವೆ ಎಂದು ನಾನು ನಿಮಗೆ ಹೇಳುತ್ತೇನೆ. 25ನೀವು ಪ್ರಾರ್ಥಿಸಲು ಸಿದ್ಧರಾಗಿರುವಾಗ, ನೀವು ಇನ್ನೊಬ್ಬನ ವಿಷಯದಲ್ಲಿ ಯಾವುದೇ ಕಾರಣದಿಂದಾಗಲಿ ಕೋಪದಿಂದಿರುವುದು ನಿಮ್ಮ ನೆನಪಿಗೆ ಬಂದರೆ, ಅವನನ್ನು ಕ್ಷಮಿಸಿಬಿಡಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವನು” ಎಂದು ಉತ್ತರಿಸಿದನು. 27ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿಗೆ ಮತ್ತೆ ಹೋದರು. ಯೇಸು ದೇವಾಲಯದಲ್ಲಿ ತಿರುಗಾಡುತ್ತಿದ್ದಾಗ, ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯನಾಯಕರು ಆತನ ಬಳಿಗೆ ಬಂದು, 28“ಇವುಗಳನ್ನೆಲ್ಲ ಮಾಡಲು ನಿನಗೆ ಯಾವ ಅಧಿಕಾರವಿದೆ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು? ನಮಗೆ ತಿಳಿಸು!” ಎಂದರು. 29ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನ್ನ ಪ್ರಶ್ನೆಗೆ ಉತ್ತರಿಸಿದರೆ ನಾನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿದ್ದೇನೆ ಎಂಬುದನ್ನು ನಿಮಗೆ ತಿಳಿಸುತ್ತೇನೆ. 30ಯೋಹಾನನು ಜನರಿಗೆ ದೀಕ್ಷಾಸ್ನಾನ ಮಾಡಿಸಿದ್ದು ದೇವರಿಂದ ಬಂದ ಅಧಿಕಾರದಿಂದಲೋ ಅಥವಾ ಮನುಷ್ಯರಿಂದ ಬಂದ ಅಧಿಕಾರದಿಂದಲೋ? ನನಗೆ ತಿಳಿಸಿ!” ಎಂದನು. 31ಯೆಹೂದ್ಯನಾಯಕರು ಈ ಪ್ರಶ್ನೆಯ ಬಗ್ಗೆ ಚರ್ಚಿಸಿ ಒಬ್ಬರಿಗೊಬ್ಬರು, “‘ಯೋಹಾನನು ದೀಕ್ಷಾಸ್ನಾನ ಕೊಟ್ಟದ್ದು ದೇವರಿಂದ ಬಂದ ಅಧಿಕಾರದಿಂದ’ ಎಂದು ನಾವು ಉತ್ತರಿಸಿದರೆ, ಆಗ ‘ಮತ್ತೆ ನೀವು ಏಕೆ ಯೋಹಾನನನ್ನು ನಂಬಲಿಲ್ಲ?’ ಎಂದು ಯೇಸು ಕೇಳುತ್ತಾನೆ. 32ಆದರೆ ‘ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮನುಷ್ಯನಿಂದ ಬಂದ ಅಧಿಕಾರದಿಂದ’ ಎಂದು ಹೇಳಿದರೆ, ಆಗ ಜನರು ನಮ್ಮ ಮೇಲೆ ಕೋಪಗೊಳ್ಳುತ್ತಾರೆ” ಎಂದು ಮಾತಾಡಿಕೊಂಡರು. ಜನರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರಿಂದ ಅವರು ಜನರಿಗೆ ಭಯಪಟ್ಟರು. 33ಆದಕಾರಣ ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ” ಎಂದು ಉತ್ತರಿಸಿದರು. ಯೇಸು ಅವರಿಗೆ, “ಹಾಗಾದರೆ ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತಿದ್ದೇನೆಂದು ನಿಮಗೆ ಹೇಳುವುದಿಲ್ಲ” ಎಂದನು.


Copyrighted Material
Learn More

will be added

X\