ಮತ್ತಾಯ 10

1ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ದುರಾತ್ಮಗಳನ್ನು ಬಿಡಿಸುವುದಕ್ಕೂ ಎಲ್ಲಾ ತರದ ವ್ಯಾಧಿ ಮತ್ತು ಕಾಯಿಲೆಗಳನ್ನು ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು. 2ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿವೆ: ಸೀಮೋನ (ಪೇತ್ರನೆಂದು ಕರೆಯುತ್ತಾರೆ) ಮತ್ತು ಇವನ ಸಹೋದರ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ಸಹೋದರ ಯೋಹಾನ, 3ಫಿಲಿಪ್ಪ ಮತ್ತು ಬಾರ್ತೊಲೊಮಾಯ, ತೋಮ, ಸುಂಕವಸೂಲಿಗಾರನಾಗಿದ್ದ ಮತ್ತಾಯ, ಅಲ್ಛಾಯನ ಮಗನಾದ ಯಾಕೋಬ, ತದ್ದಾಯ, 4ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದ ಸಿಮೋನ ಮತ್ತು ಯೇಸುವನ್ನು ಶತ್ರುಗಳಿಗೆ ಒಪ್ಪಿಸಿದ ಇಸ್ಕರಿಯೋತ ಯೂದ. 5ಯೇಸು ಈ ಹನ್ನೆರಡು ಅಪೊಸ್ತಲರಿಗೆ ಕೆಲವು ಆಜ್ಞೆಗಳನ್ನು ನೀಡಿ ಪರಲೋಕರಾಜ್ಯವನ್ನು ಕುರಿತು ತಿಳಿಸುವುದಕ್ಕಾಗಿ ಅವರನ್ನು ಕಳುಹಿಸಿದನು. ಯೇಸು ಅವರಿಗೆ ಹೇಳಿದ್ದೇನೆಂದರೆ: “ಯೆಹೂದ್ಯರಲ್ಲದ ಜನರ ಬಳಿಗಾಗಲಿ ಸಮಾರ್ಯದವರು ವಾಸಿಸುವ ಯಾವ ಊರಿಗಾಗಲಿ ಹೋಗಬೇಡಿ. 6ಆದರೆ ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಹೋಗಿ, 7ಪರಲೋಕರಾಜ್ಯವು ಬೇಗನೆ ಬರುತ್ತದೆ ಎಂದು ಬೋಧಿಸಿ. 8ರೋಗಿಗಳನ್ನು ವಾಸಿಮಾಡಿರಿ. ಸತ್ತವರನ್ನು ಬದುಕಿಸಿರಿ. ಕುಷ್ಠರೋಗಿಗಳನ್ನು ವಾಸಿಮಾಡಿರಿ. ಜನರನ್ನು ದೆವ್ವಗಳಿಂದ ಬಿಡಿಸಿರಿ. ನಾನು ನಿಮಗೆ ಈ ಅಧಿಕಾರಗಳನ್ನು ಉಚಿತವಾಗಿ ಕೊಡುತ್ತೇನೆ. ಆದ್ದರಿಂದ ಬೇರೆಯವರಿಗೆ ಉಚಿತವಾಗಿ ಸಹಾಯಮಾಡಿ. 9ನಿಮ್ಮೊಂದಿಗೆ ಹಣವನ್ನಾಗಲಿ ತಾಮ್ರ, ಬೆಳ್ಳಿಬಂಗಾರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ. 10ಚೀಲವನ್ನಾಗಲಿ ಹೆಚ್ಚಿನ ಬಟ್ಟೆಗಳನ್ನಾಗಲಿ ಪಾದರಕ್ಷೆಗಳನ್ನಾಗಲಿ ಊರುಗೋಲುಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ. ಕೆಲಸಗಾರನಿಗೆ ಅಗತ್ಯವಾದವುಗಳನ್ನು ಒದಗಿಸಲಾಗುವುದು. 11“ನೀವು ಯಾವುದೇ ಊರಿನೊಳಕ್ಕೆ ಅಥವಾ ನಗರಕ್ಕೆ ಪ್ರವೇಶಿಸಿದಾಗ ಅಲ್ಲಿರುವ ಉತ್ತಮ ವ್ಯಕ್ತಿಯನ್ನು ಗುರುತಿಸಿ, ನೀವು ಆ ಊರನ್ನು ಬಿಡುವ ತನಕ ಅವನ ಮನೆಯಲ್ಲೇ ತಂಗಿರಿ. 12ಆ ಮನೆಗೆ ನೀವು ಪ್ರವೇಶಿಸಿದಾಗ, ‘ನಿಮಗೆ ಶುಭವಾಗಲಿ’ ಎಂದು ಹೇಳಿರಿ. 13ಆ ಮನೆಯಲ್ಲಿರುವ ಜನರು ನಿಮ್ಮನ್ನು ಸ್ವಾಗತಿಸಿದರೆ ನಿಮ್ಮ ಆಶೀರ್ವಾದಕ್ಕೆ ಅವರು ಯೋಗ್ಯರಾಗಿರುವುದರಿಂದ ಆ ಆಶೀರ್ವಾದವು ಅವರಿಗೆ ದೊರೆಯಲಿ. ಅವರು ನಿಮ್ಮನ್ನು ಸ್ವಾಗತಿಸದಿದ್ದರೆ, ನಿಮ್ಮ ಆಶೀರ್ವಾದವು ನಿಮಗೇ ಹಿಂತಿರುಗಿಬರಲಿ. 14ಒಂದು ಮನೆಯವರು ಅಥವಾ ಒಂದು ಊರಿನವರು ನಿಮ್ಮನ್ನು ಸ್ವಾಗತಿಸದಿದ್ದರೆ ಇಲ್ಲವೇ ನಿಮ್ಮ ಮಾತನ್ನು ಕೇಳದಿದ್ದರೆ ನೀವು ಆ ಸ್ಥಳವನ್ನು ಬಿಟ್ಟುಹೋಗುವಾಗ, ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. 15ನ್ಯಾಯವಿಚಾರಣೆಯ ದಿನದಲ್ಲಿ ಈ ಊರಿನ ಗತಿಯು ಸೊದೋಮ್ ಮತ್ತು ಗೊಮೋರಗಳಿಗಿಂತ ಬಹಳ ಕೆಟ್ಟದ್ದಾಗಿರುವುದು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. 16“ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ. 17ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮನ್ನು ಅವರು ಬಂಧಿಸಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವರು. ಅವರು ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು. 18ನಿಮ್ಮನ್ನು ಅಧಿಕಾರಿಗಳ ಸಮ್ಮುಖಕ್ಕೂ ಅರಸುಗಳ ಸಮ್ಮುಖಕ್ಕೂ ಕರೆದುಕೊಂಡು ಹೋಗುವರು. ನನ್ನ ನಿಮಿತ್ತ ಜನರು ನಿಮಗೆ ಹೀಗೆ ಮಾಡುವರು. ಆದರೆ ನೀವು ಆ ಅರಸುಗಳಿಗೂ ಅಧಿಕಾರಿಗಳಿಗೂ ಯಹೂದ್ಯರಲ್ಲದ ಜನರಿಗೂ ನನ್ನ ವಿಷಯವಾಗಿ ಹೇಳುವಿರಿ. 19ನಿಮ್ಮನ್ನು ಬಂಧಿಸಿದಾಗ ನೀವು ಏನು ಮಾತಾಡಬೇಕು, ಹೇಗೆ ಮಾತಾಡಬೇಕು ಎಂದು ಚಿಂತಿಸಬೇಡಿ. ನೀವು ಹೇಳಬೇಕಾದುವುಗಳನ್ನು ಆ ಸಮಯದಲ್ಲಿ ನಿಮಗೆ ಅನುಗ್ರಹಿಸಲಾಗುವುದು. 20ಮಾತಾಡುವವರು ನಿಜವಾಗಿಯೂ ನೀವಲ್ಲ. ನಿಮ್ಮ ತಂದೆಯ ಆತ್ಮನೇ ನಿಮ್ಮ ಮೂಲಕ ಮಾತನಾಡುತ್ತಾನೆ. 21“ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. 22ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುತ್ತಾರೆ. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆ ಹೊಂದುವನು. 23ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. 24“ಶಿಷ್ಯನು ಗುರುವಿಗಿಂತ ಉತ್ತಮನಲ್ಲ. ಆಳು ತನ್ನ ದಣಿಗಿಂತ ಉತ್ತಮನಲ್ಲ. 25ಶಿಷ್ಯನು ತನ್ನ ಗುರುವಿನಂತಾದರೆ ಸಾಕು. ಆಳು ತನ್ನ ದಣಿಯಂತಾದರೆ ಸಾಕು. ಕುಟುಂಬದ ಹಿರಿಯನನ್ನೇ ಬೆಲ್ಜೆಬೂಲ (ದೆವ್ವ) ಎಂದು ಕರೆದರೆ, ಆ ಕುಟುಂಬದ ಇತರರನ್ನು ಮತ್ತಷ್ಟು ಕೆಟ್ಟ ಹೆಸರಿನಿಂದ ಕರೆಯುವುದಿಲ್ಲವೇ? 26“ಆದಕಾರಣ ಆ ಜನರಿಗೆ ಹೆದರಬೇಡಿ. ಮರೆಯಾಗಿರುವ ಪ್ರತಿಯೊಂದೂ ಬಹಿರಂಗವಾಗುವುದು. ಗುಪ್ತವಾಗಿರುವ ಪ್ರತಿ ಸಂಗತಿಯು ಬಯಲಾಗುವುದು. 27ನಾನು ಕತ್ತಲೆಯಲ್ಲಿ (ರಹಸ್ಯವಾಗಿ) ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದೇನೆ. ಆದರೆ ನೀವು ಈ ಸಂಗತಿಗಳನ್ನು ಬೆಳಕಿನಲ್ಲಿ ಹೇಳಬೇಕೆಂಬುದು ನನ್ನ ಇಷ್ಟ. ನಾನು ಈ ವಿಷಯಗಳನ್ನು ನಿಮಗೆ ಮೆಲ್ಲಗೆ ಹೇಳುತ್ತಿದ್ದೇನೆ. ಆದರೆ ನೀವು ಈ ವಿಷಯಗಳನ್ನು ಜನರಿಗೆಲ್ಲ ಗಟ್ಟಿಯಾಗಿ ಹೇಳಿರಿ. 28“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ. 29ಮಾರುಕಟ್ಟೆಯಲ್ಲಿ ಎರಡು ಗುಬ್ಬಚ್ಚಿಗಳನ್ನು ಒಂದು ನಾಣ್ಯಕ್ಕೆ ಮಾರುತ್ತಾರೆ. ಆದರೆ ನಿಮ್ಮ ತಂದೆಯು ಅಪ್ಪಣೆ ಕೊಡದ ಹೊರತು ಅವುಗಳಲ್ಲಿ ಒಂದಾದರೂ ಸಾಯುವುದಿಲ್ಲ. 30ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳು ಇವೆ ಎಂಬುದು ಸಹ ದೇವರಿಗೆ ತಿಳಿದಿದೆ. 31ಆದಕಾರಣ ಹೆದರಬೇಡಿ. ನೀವು ಅನೇಕ ಗುಬ್ಬಚ್ಚಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ. 32“ಒಬ್ಬನು ಬೇರೆಯವರ ಮುಂದೆ, ತಾನು ನನ್ನವನೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ನನ್ನವನೆಂದು ಹೇಳುತ್ತೇನೆ. 33ಆದರೆ ಒಬ್ಬನು ಜನರ ಮುಂದೆ, ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನು ನನ್ನವನಲ್ಲವೆಂದು ಹೇಳುತ್ತೇನೆ. 34“ಭೂಲೋಕದಲ್ಲಿ ಶಾಂತಿಯನ್ನು ಉಂಟುಮಾಡಲು ನಾನು ಬಂದಿದ್ದೇನೆಂದು ಯೋಚಿಸಬೇಡಿ. ನಾನು ಶಾಂತಿಯನ್ನು ಉಂಟುಮಾಡಲು ಬರಲಿಲ್ಲ, ಖಡ್ಗ ಹಾಕಲು ಬಂದಿದ್ದೇನೆ. 35ಈ ಪ್ರವಾದನೆ ನೆರವೇರುವಂತೆ ಮಾಡಲು ನಾನು ಬಂದಿದ್ದೇನೆ: ‘ಒಬ್ಬನಿಗೆ ಅವನ ಮನೆಯವರೇ ವೈರಿಗಳಾಗುವರು. ಮಗನು ತಂದೆಗೆ, ಮಗಳು ತಾಯಿಗೆ, ಸೊಸೆಯು ಅತ್ತೆಗೆ ವೈರಿಗಳಾಗುವರು.’ 37“ಯಾರಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆ ಅಥವಾ ತಾಯಿಯನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಯಾವನಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಇಲ್ಲವೆ ಮಗಳನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. 38ಯಾವನಾದರೂ ನನ್ನನ್ನು ಹಿಂಬಾಲಿಸುವಾಗ ಅವನಿಗೆ ಕೊಡುವಂಥ ಶಿಲುಬೆಯನ್ನು (ಸಂಕಟವನ್ನು) ಅಂಗೀಕರಿಸದಿದ್ದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. 39ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಪಡೆದುಕೊಳ್ಳುವನು. 40“ನಿಮ್ಮನ್ನು ಅಂಗೀಕರಿಸುವವನು ನನ್ನನ್ನು ಸಹ ಅಂಗೀಕರಿಸುವನು. ನನ್ನನ್ನು ಅಂಗೀಕರಿಸುವವನು ನನ್ನನ್ನು ಕಳುಹಿಸಿದಾತನನ್ನು (ದೇವರನ್ನು) ಸಹ ಅಂಗೀಕರಿಸುವನು. 41ಪ್ರವಾದಿಯನ್ನು ಪ್ರವಾದಿಯೆಂದು ಸಂಧಿಸಿ ಸ್ವಾಗತಿಸುವವನು ಆ ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಪಡೆಯುವನು. ಸತ್ಪುರುಷನನ್ನು ಸತ್ಪುರುಷನೆಂದು ಸ್ವಾಗತಿಸುವವನು ಆ ಸತ್ಪುರುಷನಿಗೆ ಬರತಕ್ಕ ಪ್ರತಿಫಲವನ್ನು ಪಡೆಯುವನು. 42ದೀನರಾದ ಇವರಿಗೆ ನನ್ನ ಹಿಂಬಾಲಕರೆಂಬ ನಿಮಿತ್ತ ಸಹಾಯ ಮಾಡುವವನು ಖಂಡಿತವಾಗಿಯೂ ಪ್ರತಿಫಲವನ್ನು ಪಡೆಯುವನು. ನನ್ನ ಹಿಂಬಾಲಕರಿಗೆ ಕೇವಲ ಒಂದು ಬಟ್ಟಲು ತಣ್ಣೀರನ್ನು ಕೊಟ್ಟರೂ ಸಹ ಅದಕ್ಕೆ ಬರತಕ್ಕ ಪ್ರತಿಫಲವು ತಪ್ಪುವುದೇ ಇಲ್ಲ.”


Copyrighted Material
Learn More

will be added

X\